ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಶ್ರಮಿಸಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಬೆಳಗಾವಿ: ‘2028ಕ್ಕೆ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂಬ ಆತ್ಮವಿಶ್ವಾಸ ನನಗಿದೆ. ಇದೇ ವಿಶ್ವಾಸದೊಂದಿಗೆ ಕಾಂಗ್ರೆಸ್ ಕಾರ್ಯಕರ್ತರೂ ಕೆಲಸ ಮಾಡಬೇಕು’ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ ನೀಡಿದರು.ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಗುರುವಾರ ನಡೆದ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು. ‘ಸಿದ್ದರಾಮಯ್ಯ, ಸತೀಶ ಜಾರಕಿ

ಬೆಳಗಾವಿ: ‘2028ಕ್ಕೆ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂಬ ಆತ್ಮವಿಶ್ವಾಸ ನನಗಿದೆ. ಇದೇ ವಿಶ್ವಾಸದೊಂದಿಗೆ ಕಾಂಗ್ರೆಸ್ ಕಾರ್ಯಕರ್ತರೂ ಕೆಲಸ ಮಾಡಬೇಕು’ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ ನೀಡಿದರು.ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಗುರುವಾರ ನಡೆದ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು. ‘ಸಿದ್ದರಾಮಯ್ಯ, ಸತೀಶ ಜಾರಕಿಹೊಳಿ ಹಾಗೂ ನನ್ನ ನೇತೃತ್ವದಲ್ಲಿ, ಮುಂದಿನ ವಿಧಾನಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತರುತ್ತೇವೆ. ಇದಕ್ಕೆ ಕಾರ್ಯಕರ್ತರು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು’ ಎಂದು ತಿಳಿಸಿದರು.‘ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿದೆ. ಜನರ ಬದುಕಿನಲ್ಲಿ ಬದಲಾವಣೆ ತಂದಿದೆ. ಹಿಂದಿನ ಬಿಜೆಪಿ ಸರ್ಕಾರ ಜನಪರವಾದ ಒಂದೇ ಒಂದು ತೀರ್ಮಾನ ಮಾಡಲಿಲ್ಲ. ಭಾವನೆ ಮೇಲೆ ರಾಜಕಾರಣ ಮಾಡಿತು’ ಎಂದು ಹೇಳಿದರು. ‘ನಾನು ಕಾರ್ಯಕರ್ತ’‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು, ನನಗೆ ಮುಖ್ಯಮಂತ್ರಿ ಆಗುವ ಅವಕಾಶ ನೀಡಿದ್ದಾರೆ. ನಾನು ಮುಖ್ಯಮಂತ್ರಿ ಎನ್ನುವುದಕ್ಕಿಂತ ಪಕ್ಷದ ಕಾರ್ಯಕರ್ತ’ ಎಂದರು.‘ಮುಂದಿನ ಮೂರು ತಿಂಗಳಿನಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳು ಬರುತ್ತವೆ. ಈ ಚುನಾವಣೆಗಳಿಗೆ ಕಾರ್ಯಕರ್ತರು ಸಜ್ಜಾಗಿರಬೇಕು’ ಎಂದು ಕರೆ ನೀಡಿದರು.ಸಚಿವ ಸತೀಶ ಜಾರಕಿಹೊಳಿ, ಶಾಸಕರಾದ ಮಹಾಂತೇಶ ಕೌಜಲಗಿ, ಆಸಿಫ್ ಸೇಠ್, ವಿಶ್ವಾಸ ವೈದ್ಯ, ಬಾಬಾಸಾಹೇಬ ಪಾಟೀಲ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಕಾಂಗ್ರೆಸ್ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಮೃಣಾಲ್ ಹೆಬ್ಬಾಳಕರ ಇತರರಿದ್ದರು.