ನೂತನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಶಿರಾ ಬಳಿ ನಿರ್ಮಿಸಬೇಕು: ಸೋಮಣ್ಣ
ಬೆಂಗಳುರು: ಸರ್ಕಾರವು ನೂತನ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತುಮಕೂರು ಜಿಲ್ಲೆಯ ಶಿರಾ ಬಳಿ ನಿರ್ಮಿಸಬೇಕು ಎಂಬುದು ರಾಜ್ಯದ ಬಹುತೇಕ ಜನಪ್ರತಿನಿಧಿಗಳ ಒತ್ತಾಯ. ಶಿರಾದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದರಿಂದ ಮಧ್ಯ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಪ್ರಮುಖ ಜಿಲ್ಲೆಗಳ ಪ್ರಗತಿಗೆ ಸಹಾಯಕವಾಗಲಿದೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಇಲಾಖೆಯ ರಾಜ್
ಬೆಂಗಳುರು: ಸರ್ಕಾರವು ನೂತನ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತುಮಕೂರು ಜಿಲ್ಲೆಯ ಶಿರಾ ಬಳಿ ನಿರ್ಮಿಸಬೇಕು ಎಂಬುದು ರಾಜ್ಯದ ಬಹುತೇಕ ಜನಪ್ರತಿನಿಧಿಗಳ ಒತ್ತಾಯ. ಶಿರಾದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದರಿಂದ ಮಧ್ಯ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಪ್ರಮುಖ ಜಿಲ್ಲೆಗಳ ಪ್ರಗತಿಗೆ ಸಹಾಯಕವಾಗಲಿದೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಇಲಾಖೆಯ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಹೇಳಿದ್ಧಾರೆ.ರಾಜ್ಯ ಸರ್ಕಾರದ ಯೋಜನೆ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಚಿವ, ‘ತುಮಕೂರು, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಹಾವೇರಿ ಹಾಗೂ ರಾಯಚೂರು ಸೇರಿದಂತೆ ಪ್ರಮುಖ ಜಿಲ್ಲೆಗಳ ಶಾಸಕರು ಈ ವಿಚಾರವಾಗಿ 2025ರ ಮಾರ್ಚ್ 20 ರಂದು ನನಗೆ ಪತ್ರ ಬರೆದು ಒತ್ತಾಯಿಸಿದ್ದರು. ಹಾಗಾಗಿ, ಅದೇ ವರ್ಷದ ಏಪ್ರಿಲ್ 22ರಂದು ಕೇಂದ್ರದ ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ ನಾಯ್ಡು ಅವರಿಗೆ ಪತ್ರ ಬರೆದು ಈ ಭಾಗದ ಜನಪ್ರತಿನಿಧಿಗಳ ಒತ್ತಾಸೆಯನ್ನು ಅವರ ಗಮನಕ್ಕೆ ತಂದಿದ್ದೇನೆ’ ಎಂದು ತಿಳಿಸಿದ್ದಾರೆ.‘ರಾಜ್ಯವು ಈಗಾಗಲೇ ಬೆಂಗಳೂರು ಕೇಂದ್ರಿತವಾಗಿ ಅಭಿವೃದ್ಧಿ ಸಾಧಿಸಿದೆ. ಬೆಂಗಳೂರಿಗೆ ಪರ್ಯಾಯವಾಗಿ ರಾಜ್ಯದ ಎಲ್ಲಾ ಭಾಗಗಳನ್ನು, ನಗರಗಳನ್ನು ಸಶಕ್ತವಾಗಿ ಬೆಳೆಸುವುದು ಜನಪ್ರತಿನಿಧಿಗಳ ಜವಾಬ್ದಾರಿಯೂ ಹೌದು. ಹಾಗಾಗಿ, ಮತ್ತೊಂದು ವಿಮಾನ ನಿಲ್ದಾಣವನ್ನು ಬೆಂಗಳೂರಿನ ಸಮೀಪ ನಿರ್ಮಿಸಿದರೆ, ಉತ್ತರ ಮತ್ತು ಮಧ್ಯ ಕರ್ನಾಟಕದ ಅಭಿವೃದ್ಧಿಗೆ ನ್ಯಾಯ ಸಂದಂತೆ ಆಗುವುದಿಲ್ಲ’ ಎಂದು ಪ್ರತಿಪಾದಿಸಿದ್ದಾರೆ.‘ಶಿರಾ ಬಳಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದರಿಂದ ಮಧ್ಯ ಕರ್ನಾಟಕ ಭಾಗ ಪ್ರಗತಿ ಪಥದಲ್ಲಿ ಸಾಗಲು ಸಾಧ್ಯವಾಗಲಿದೆ. ಶಿರಾದ ಸುತ್ತುಮುತ್ತ ಮುಂಬೈ–ಬೆಂಗಳೂರು ಕೈಗಾರಿಕಾ ಕಾರಿಡಾರ್, ರಾಷ್ಟ್ರೀಯ ಹೂಡಿಕೆ ಮತ್ತು ಉತ್ಪಾದನಾ ವಲಯ (ಎನ್ಐಎಂಝಡ್), ಚೆನ್ನೈ–ಬೆಂಗಳೂರು ಕೈಗಾರಿಕಾ ಕಾರಿಡಾರ್ ಹಾಗೂ ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಪ್ರದೇಶ (ಕೆಐಎಡಿಬಿ) ಇವೆ. ರಾಷ್ಟ್ರೀಯ ಹೆದ್ದಾರಿ – 48, ರಾಷ್ಟ್ರೀಯ ಹೆದ್ದಾರಿ – 69, ರಾಷ್ಟ್ರೀಯ ಹೆದ್ದಾರಿ – 544ಇ ಸೇರಿದಂತೆ ಹಲವು ರಾಷ್ಟ್ರೀಯ ಹೆದ್ದಾರಿಗಳು, ರಾಜ್ಯ ಹೆದ್ದಾರಿಗಳು ಹಾಗೂ ಹೊಸ ರೈಲು ಮಾರ್ಗಗಳ ಸಾರಿಗೆ ಸಂಪರ್ಕ ಜಾಲವೂ ಬಲವಾಗಿದೆ’ ಎಂದಿದ್ದಾರೆ.‘ಹೆಚ್ಚಿನ ಪ್ರಮಾಣದ ಸರ್ಕಾರಿ ಭೂಮಿ ಲಭ್ಯವಿದ್ದು, ಭದ್ರಾ ಮೇಲ್ದಂಡೆ ಕಾಲುವೆ, ಹೇಮಾವತಿ ಮತ್ತು ಎತ್ತಿನಹೊಳೆ ಯೋಜನೆಗಳಿಂದ ನೀರಿನ ಲಭ್ಯತೆಯ ಜೊತೆಗೆ ಚಿತ್ರದುರ್ಗದ ಡಿಆರ್ಡಿಒ, ಐಐಎಸ್ಸಿ ಕ್ಯಾಂಪಸ್ ಹಾಗೂ ತುಮಕೂರಿನ ಗುಬ್ಬಿಯ ಎಚ್ಎಎಲ್ ಹೆಲಿಕಾಪ್ಟರ್ ಘಟಕಗಳೂ ಅತ್ಯಂತ ಸಮೀಪದಲ್ಲಿ ಕಾರ್ಯನಿರ್ವಹಿಸುತ್ತಿವೆ’ ಎಂದು ಉಲ್ಲೇಖಿಸಿದ್ದಾರೆ.‘ಶಿರಾದ ಈ ಸ್ಥಳವು ಡಿಜಿಸಿಎ ನಿಯಮಾವಳಿಗೆ ಅನುಸಾರವಾಗಿ ಬೆಂಗಳೂರು ವಿಮಾನ ನಿಲ್ದಾಣದಿಂದ ಸುಮಾರು 150 ಕಿ.ಮೀ ದೂರವಿದೆ. ಅಲ್ಲದೇ, ಇದರಿಂದಾಗಿ ಮಧ್ಯ ಮತ್ತು ಉತ್ತರ ಕರ್ನಾಟಕದ ಜನರಿಗೆ ಅಂತರರಾಷ್ಟ್ರೀಯ ಪ್ರಯಾಣ ಹಾಗೂ ಸರಕು ಸಾಗಣೆಗೆ ಅನುಕೂಲವಾಗಲಿದೆ. ಕೈಗಾರಿಕೆ, ಉದ್ಯೋಗ, ಹೂಡಿಕೆ ಮತ್ತು ಪ್ರಾದೇಶಿಕ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ದೊರಕಲಿದ್ದು, ರಾಜ್ಯದ ಸಮತೋಲಿತ ಅಭಿವೃದ್ಧಿಗೆ ಸಹಕಾರಿಯಾಗಲಿದೆ’ ಎಂದು ಒತ್ತಿ ಹೇಳಿದ್ದಾರೆ.‘ರಾಜ್ಯದ ಸಮಗ್ರ ಅಭಿವೃದ್ಧಿಯ ಹಿತದೃಷ್ಟಿಯಿಂದ ತುಮಕೂರಿನ ಶಿರಾ ಭಾಗದಲ್ಲಿಯೇ ನೂತನ ವಿಮಾನ ನಿಲ್ದಾಣ ನಿರ್ಮಿಸುವಂತೆ ಕೇಂದ್ರ ವಿಮಾನಯಾನ ಸಚಿವರನ್ನು ಒತ್ತಾಯಿಸಿದ್ದೇನೆ. ರಾಜ್ಯ ಸರ್ಕಾರವು ರಾಜ್ಯದ ಸಮಗ್ರ ಅಭಿವೃದ್ಧಿಯನ್ನೇ ಮಾನದಂಡವನ್ನಾಗಿ ಇಟ್ಟುಕೊಂಡು ಚಿಂತನೆ ನಡೆಸಬೇಕೆಂದು’ ಎಂದು ಕೋರಿದ್ದಾರೆ.