ರಾಜ್ಯದಲ್ಲಿ ತೀವ್ರ ಬರದ ಛಾಯೆ – ತುಂಗಾ ಡ್ಯಾಂ ನೀರು ನಂಬಿ ಬೆಳೆ ಬೆಳೆಯದಂತೆ ಮನವಿ
ಶಿವಮೊಗ್ಗ: ತೀವ್ರಗೊಳ್ಳುತ್ತಿರುವ ಎಲ್ನಿನೊ ಪರಿಣಾಮದಿಂದ ರಾಜ್ಯದಲ್ಲಿ ಜಲಾಶಯಗಳ ಒಳಹರಿವು ಕಡಿಮೆ ಹಾಗೂ ಬಹುತೇಕ ಶೂನ್ಯಕ್ಕೆ ಇಳಿದಿರುವ ಹಿನ್ನೆಲೆಯಲ್ಲಿ, ಪ್ರಸಕ್ತ ಸಾಲಿನಲ್ಲಿ ಜಲಾಶಯಗಳನ್ನ ನಂಬಿಕೊಂಡು ಯಾವುದೇ ಮುಂಗಾರು ಹಂಗಾಮಿನ ಬೆಳೆಗಳನ್ನು ಬೆಳೆಯದಂತೆ ಕರ್ನಾಟಕ ನೀರಾವರಿ ನಿಗಮ ನಿಯಮಿತದ ತುಂಗಾ ಮೇಲ್ದಂಡೆ ಯೋಜನೆ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಅವರು ರೈತರಲ್ಲ

ಶಿವಮೊಗ್ಗ: ತೀವ್ರಗೊಳ್ಳುತ್ತಿರುವ ಎಲ್ನಿನೊ ಪರಿಣಾಮದಿಂದ ರಾಜ್ಯದಲ್ಲಿ ಜಲಾಶಯಗಳ ಒಳಹರಿವು ಕಡಿಮೆ ಹಾಗೂ ಬಹುತೇಕ ಶೂನ್ಯಕ್ಕೆ ಇಳಿದಿರುವ ಹಿನ್ನೆಲೆಯಲ್ಲಿ, ಪ್ರಸಕ್ತ ಸಾಲಿನಲ್ಲಿ ಜಲಾಶಯಗಳನ್ನ ನಂಬಿಕೊಂಡು ಯಾವುದೇ ಮುಂಗಾರು ಹಂಗಾಮಿನ ಬೆಳೆಗಳನ್ನು ಬೆಳೆಯದಂತೆ ಕರ್ನಾಟಕ ನೀರಾವರಿ ನಿಗಮ ನಿಯಮಿತದ ತುಂಗಾ ಮೇಲ್ದಂಡೆ ಯೋಜನೆ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಅವರು ರೈತರಲ್ಲಿ ಮನವಿ ಮಾಡಿದ್ದಾರೆ. ಇತ್ತೀಚಿಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಬರದ ಪರಿಸ್ಥಿತಿ ಕುರಿತು ಸುದೀರ್ಘ ಚರ್ಚೆ ನಡೆಸಿದ ಬಳಿಕ ಜಲಾಶಯ ನಂಬಿಕೊಂಡು ಯಾವ ರೈತರೂ ಬೆಳೆ ಹಾಕಬೇಡಿ ಎಂದು ಸಿಎಂ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಸಿಎಂ ನಿರ್ದೇಶನದಂತೆ ಪ್ರಸ್ತುತ ಜಲಾಶಯಗಳಲ್ಲಿ ಲಭ್ಯವಿರುವ ನೀರನ್ನು ಕಡ್ಡಾಯವಾಗಿ ಕೇವಲ ಕುಡಿಯುವ ನೀರಿಗಾಗಿ ಮಾತ್ರ ಕಾಯ್ದಿರಿಸಬೇಕಾದ ತುರ್ತು ಪರಿಸ್ಥಿತಿ ಎದುರಾಗಿದೆ. ಸರ್ಕಾರದ ಸುತ್ತೋಲೆಯ ಅನ್ವಯ, ರೈತರಿಗೆ ಈ ಪರಿಸ್ಥಿತಿಯ ಬಗ್ಗೆ ಮನವರಿಕೆ ಮಾಡಿಕೊಡಲು ಹಾಗೂ ಆಯಾ ಪ್ರಾದೇಶಿಕ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಲು ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ. ಕುಡಿಯಲು ಮಾತ್ರ ನೀರು ಬಿಡುಗಡೆ: ತುಂಗಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆ ಹಾಗೂ ತುಂಗಾ ಅಣೆಕಟ್ಟು ಕಾಲುವೆಗಳಲ್ಲಿ ಕೇವಲ ಜನ – ಜಾನುವಾರುಗಳ ಕುಡಿಯುವ ನೀರಿನ ಉದ್ದೇಶಕ್ಕೆ ಸೀಮಿತವಾಗಿ ಮಾತ್ರ ನೀರನ್ನು ಹರಿಸಲು ಈಗಾಗಲೇ ಅಧಿಕೃತ ಪ್ರಕಟಣೆ ಹೊರಡಿಸಿ ಕ್ರಮ ಕೈಗೊಳ್ಳಲಾಗಿದೆ. ಆದ್ದರಿಂದ, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತ ಬಾಂಧವರು ಯಾವುದೇ ನೀರಾವರಿ ಬೆಳೆಗಳನ್ನ ಬೆಳೆಯಲು ಮುಂದಾಗಬಾರದೆಂದು ವಿನಂತಿಸಲಾಗಿದ್ದು ಜಲಕ್ಷಾಮದ ಈ ಸಂದರ್ಭದಲ್ಲಿ ರೈತರು ಪರಿಸ್ಥಿತಿಯನ್ನು ಅರ್ಥೈಸಿಕೊಂಡು, ಇಲಾಖೆಯೊಂದಿಗೆ ಸಂಪೂರ್ಣವಾಗಿ ಸಹಕರಿಸಬೇಕಾಗಿ ಕ.ನೀ.ನಿ.ನಿ., ತುಂಗಾ ಮೇಲ್ದಂಡೆ ಯೋಜನೆ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಮನವಿ ಮಾಡಿದ್ದಾರೆ.