ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆ
ದೊಡ್ಡಬಳ್ಳಾಪುರ:ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ಭಾಗಿಯಾದ ವಿರುದ್ಧ ಕ್ರಮ ಕೈಗೊಳ್ಳೂವಂತೆ ಹಾಗೂ ನವದೆಹಲಿಯ ಜಂತರ್ ಮಂತರ್ ಬಳಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಯುವಜನತೆ ಮತ್ತು ವಿದ್ಯಾರ್ಥಿಗಳ ಮೇಲೆ ಪೊಲೀಸರು ಎಸಗಿರುವ ಕೃತ್ಯ ಖಂಡಿಸಿ ಕನ್ನಡ ಜಾಗೃತ ಪರಿಷತ್ ನೇತೃತ್ವದಲ್ಲಿ ವಿವಿಧ ಸಂಘಟನೆಗಳಿಂದ ‘ಪ್ರಜಾಪ್ರಭುತ್ವದ ಮೇಲಿನ ದಾಳಿ ಮೆಟ್ಟಿ ನಿ

ದೊಡ್ಡಬಳ್ಳಾಪುರ:ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ಭಾಗಿಯಾದ ವಿರುದ್ಧ ಕ್ರಮ ಕೈಗೊಳ್ಳೂವಂತೆ ಹಾಗೂ ನವದೆಹಲಿಯ ಜಂತರ್ ಮಂತರ್ ಬಳಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಯುವಜನತೆ ಮತ್ತು ವಿದ್ಯಾರ್ಥಿಗಳ ಮೇಲೆ ಪೊಲೀಸರು ಎಸಗಿರುವ ಕೃತ್ಯ ಖಂಡಿಸಿ ಕನ್ನಡ ಜಾಗೃತ ಪರಿಷತ್ ನೇತೃತ್ವದಲ್ಲಿ ವಿವಿಧ ಸಂಘಟನೆಗಳಿಂದ ‘ಪ್ರಜಾಪ್ರಭುತ್ವದ ಮೇಲಿನ ದಾಳಿ ಮೆಟ್ಟಿ ನಿಲ್ಲೋಣ, ಜನತಾದ್ರೋಹಿಗಳಿಗೆ ಉಗಿಯೋಣ’ ಎನ್ನುವ ಘೋಷಣೆಯೊಂದಿಗೆ ತಾಲ್ಲೂಕು ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿ ಸಮುದಾಯಕ್ಕೆ ಬಗೆದ ದ್ರೋಹ. ತಮ್ಮದಲ್ಲದ ತಪ್ಪಿಗೆ ಮತ್ತೆ ನೀಟ್ ಬರೆಯುವ ಶಿಕ್ಷೆಗೆ 22 ಲಕ್ಷ ವಿದ್ಯಾರ್ಥಿಗಳು ತುತ್ತಾದರು. ಆತಂಕ, ಅನಿಶ್ಚಿತತೆ, ಸೀಟು ಸಿಗುವ, ಕೈತಪ್ಪುವ ಆತಂಕಕ್ಕೆ ಒಳಗಾದರೂ. 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡರು. ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ಭಾಗಿಯಾದ ದೇಶದ್ರೋಹಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಕಾರು ಆಗ್ರಹಿಸಿದರು.ಯುವಜನರು ಮತ್ತು ವಿದ್ಯಾರ್ಥಿಗಳು ಜುಲೈ 20ರಂದು ನವದೆಹಲಿಯ ಜಂತರ್ ಮಂತರ್ ಅಂಗಳದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಇವರ ಮೇಲೆ ಕೇಂದ್ರ ಸರ್ಕಾರ ನಿಯೋಜಿಸಿದ ಗೂಂಡಾಗಳು ಮತ್ತು ದೆಹಲಿ ಪೊಲೀಸರು ನಡೆಸಿದ ಲಾಟಿಚಾರ್ಜ್ಗೆ ಸಾವಿರಾರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹಿಳಾ ಹೋರಾಟಗಾರ್ತಿಯರ ಮೇಲೆ ಪುರುಷ ಪೊಲೀಸರು ಕೆಟ್ಟದಾಗಿ ನಡೆದುಕೊಂಡಿದ್ದಾರೆ. ಮಹಿಳೆಯರು ಹಾಗೂ ವಿದ್ಯಾರ್ಥಿನಿಯರ ಮೇಲೆ ನಕಲಿ ಪೊಲೀಸರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದರು.ರಾಜ್ಯ ಸರ್ಕಾರದಲ್ಲಿ ಸಿಇಟಿ ಪರೀಕ್ಷೆ ವ್ಯವಸ್ಥಿತವಾಗಿ ನಡೆಯುತ್ತಿದ್ದು, ರಾಜ್ಯದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಿತ್ತು. ಆದರೆ ನೀಟ್ ಪರೀಕ್ಷೆಯಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಅವಕಾಶಗಳು ಕಿತ್ತುಕೊಳ್ಳುವುದರೊಂದಿಗೆ ಇಂತಹ ಹಗರಣಗಳ ಸರಮಾಲೆ ನಡೆಯುತ್ತಿದೆ. ಕೇಂದ್ರದ ಮೋದಿ ಸರ್ಕಾರ ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುತ್ತಿರುವುದು ಖಂಡನೀಯ ಎಂದರು.ಹಿರಿಯ ಕನ್ನಡಪರ ಹೋರಾಟಗಾರ ಜಿ.ಸತ್ಯನಾರಾಯಣ, ಕನ್ನಡ ಪಕ್ಷದ ರಾಜ್ಯ ಉಪಾಧ್ಯಕ್ಷ ಸಂಜೀವ್ ನಾಯಕ್, ಕನ್ನಡ ಜಾಗೃತ ಪರಿಷತ್ತು ಕಾರ್ಯದರ್ಶಿ ಡಿ.ಪಿ.ಆಂಜನೇಯ, ಕನ್ನಡ ಜಾಗೃತ ಪರಿಷತ್ತಿನ ಅಧ್ಯಕ್ಷ ಕೆ.ವೆಂಕಟೇಶ್, ಟ್ರಸ್ಟಿಗಳಾದ ಮೇಜರ್ ಮಹಾಬಲೇಶ್ವರ್, ಎ.ಓ.ಆವಲಮೂರ್ತಿ, ವಕೀಲ ಕೃಷ್ಣಮೂರ್ತಿ, ತಾಲ್ಲೂಕು ಕಸಾಪ ಮಾಜಿ ಅಧ್ಯಕ್ಷೆ ಪ್ರಮೀಳಾ ಮಹಾದೇವ್, ಕನ್ನಡ ಪಕ್ಷದ ಜಿಲ್ಲಾಧ್ಯಕ್ಷ ಮುನಿಪಾಪಯ್ಯ, ತಾಲ್ಲೂಕು ಅಧ್ಯಕ್ಷ ವೆಂಕಟೇಶ್, ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ, ತಾಲ್ಲೂಕು ಕಾರ್ಯದರ್ಶಿ ಸತೀಶ್, ಹಳ್ಳಿರೈತ ಅಂಬರೀಶ್, ಕನ್ನಡ ಜಾಗೃತ ಪರಿಷತ್ತಿನ ವೆಂಕಟರಾಜು, ಹನುಮಂತರಾಯಪ್ಪ, ಜಿಲ್ಲಾ ಶಿವರಾಜ್ಕುಮಾರ್ ಸೇನಾ ಸಮಿತಿ ಅಧ್ಯಕ್ಷ ರಮೇಶ್ ಭಾಗವಹಿಸಿದ್ದರು.ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260725-15-1982746394