ಸಂಪುಟ ವಿಸ್ತರಣೆ: ಹೈಕಮಾಂಡ್ ನಾಯಕರ ಸಭೆ ದಿಢೀರ್ ಮುಂದೂಡಿಕೆ
ನವದೆಹಲಿ: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ಹೈಕಮಾಂಡ್ ನಾಯಕರ ನೇತೃತ್ವದಲ್ಲಿ ಸೋಮವಾರ ರಾತ್ರಿ ನಿಗದಿಯಾಗಿದ್ದ ಸಭೆ ದಿಢೀರ್ ಮುಂದೂಡಿಕೆಯಾಯಿತು.ಸಂಪುಟಕ್ಕೆ ಸೇರ್ಪಡೆಯಾಗುವವರ ಪಟ್ಟಿ ಅಂತಿಮಗೊಳಿಸುವ ಸಂಬಂಧ ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖಂಡ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ರಾಷ್ಟ್ರ ರಾಜಧಾನಿಗೆ ಬಂ

ನವದೆಹಲಿ: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ಹೈಕಮಾಂಡ್ ನಾಯಕರ ನೇತೃತ್ವದಲ್ಲಿ ಸೋಮವಾರ ರಾತ್ರಿ ನಿಗದಿಯಾಗಿದ್ದ ಸಭೆ ದಿಢೀರ್ ಮುಂದೂಡಿಕೆಯಾಯಿತು.ಸಂಪುಟಕ್ಕೆ ಸೇರ್ಪಡೆಯಾಗುವವರ ಪಟ್ಟಿ ಅಂತಿಮಗೊಳಿಸುವ ಸಂಬಂಧ ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖಂಡ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ರಾಷ್ಟ್ರ ರಾಜಧಾನಿಗೆ ಬಂದಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರ ನೇತೃತ್ವದಲ್ಲಿ ಈ ಮೂವರು ನಾಯಕರೊಂದಿಗೆ ಪ್ರತ್ಯೇಕ ಸಭೆ ಸೋಮವಾರ ರಾತ್ರಿ ನಿಗದಿಯಾಗಿತ್ತು.ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸಲು ಹರಿಪ್ರಸಾದ್ ಹಾಗೂ ಸಿದ್ದರಾಮಯ್ಯ ಸಜ್ಜಾಗಿ ಹೊರಟಿದ್ದರು. ಈ ವೇಳೆ, ಸಭೆ ಮುಂದೂಡಿರುವ ಬಗ್ಗೆ ಹೈಕಮಾಂಡ್ ನಾಯಕರಿಂದ ಸಂದೇಶ ಬಂತು. ಮಂಗಳವಾರ ರಾತ್ರಿ ಈ ಸಭೆ ನಡೆಯುವ ನಿರೀಕ್ಷೆ ಇದೆ. ಆ ಬಳಿಕವಷ್ಟೇ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ವಿರೋಧ ಪಕ್ಷಗಳ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಮಾಲೋಚನೆ ನಡೆದು ಪಟ್ಟಿ ಆಖೈರುಗೊಳ್ಳಲಿದೆ.ಪರೀಕ್ಷಾ ಅಕ್ರಮ ತಡೆಗೆ ತಿದ್ದುಪಡಿ ಮಸೂದೆ ಬಗ್ಗೆ ಸೋಮವಾರ ಚರ್ಚೆ ನಡೆದಿಲ್ಲ. ಮಂಗಳವಾರ ಚರ್ಚೆ ನಡೆಸಿ ಅನುಮೋದನೆ ಪಡೆಯಲು ಕೇಂದ್ರ ಸರ್ಕಾರ ಯೋಜಿಸಿದೆ. ಹೀಗಾಗಿ, ಮಂಗಳವಾರ ತಡರಾತ್ರಿವರೆಗೆ ಅಧಿವೇಶನ ನಡೆಯುವ ನಿರೀಕ್ಷೆ ಇದೆ. ಒಂದುವೇಳೆ, ತಡರಾತ್ರಿವರೆಗೆ ಅಧಿವೇಶನ ನಡೆದರೆ ವರಿಷ್ಠರ ನೇತೃತ್ವದಲ್ಲಿ ಸಂಪುಟ ಕುರಿತ ಚರ್ಚೆ ಮಂಗಳವಾರ ನಡೆಯುವ ಸಾಧ್ಯತೆ ಕಡಿಮೆ ಎಂದು ಮೂಲಗಳು ತಿಳಿಸಿವೆ.ಸಂಪುಟದಲ್ಲಿ ಪ್ರಸ್ತುತ ಮುಖ್ಯಮಂತ್ರಿ ಸೇರಿದಂತೆ ಹದಿನಾಲ್ಕು ಸಚಿವರಿದ್ದಾರೆ. ಇಪ್ಪತ್ತು ಸ್ಥಾನಗಳನ್ನು ಭರ್ತಿ ಮಾಡಬೇಕಿದೆ. ಜತೆಗೆ, ವಿಧಾನಸಭಾಧ್ಯಕ್ಷರ ಹೆಸರನ್ನು ಅಂತಿಮಗೊಳಿಸಬೇಕಿದೆ. ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ಹಿರಿಯ ಶಾಸಕರಾದ ಎಚ್.ಕೆ.ಪಾಟೀಲ, ಬಿ.ಆರ್.ಪಾಟೀಲ ಹಾಗೂ ಆರ್.ವಿ.ದೇಶಪಾಂಡೆ ಅವರ ಹೆಸರು ಮುಂಚೂಣಿಯಲ್ಲಿದೆ.ರಾಷ್ಟ್ರ ರಾಜಧಾನಿಯಲ್ಲಿ ಕಳೆದ ಕೆಲವು ದಿನಗಳಿಂದ ಬೀಡುಬಿಟ್ಟಿರುವ ಸಚಿವ ಸ್ಥಾನದ ಆಕಾಂಕ್ಷಿಗಳು ಸೋಮವಾರವೂ ಲಾಬಿ ನಡೆಸಿದರು. ಮುಖ್ಯಮಂತ್ರಿ ಹಾಗೂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತಮ್ಮನ್ನು ಪರಿಗಣಿಸುವಂತೆ ಮನವಿ ಮಾಡಿದರು. ಸುಮಾರು ನಲವತ್ತಕ್ಕೂ ಅಧಿಕ ಆಕಾಂಕ್ಷಿಗಳು ಹೈಕಮಾಂಡ್ ಹಾಗೂ ರಾಜ್ಯದ ನಾಯಕರ ಮೇಲೆ ವಿವಿಧ ರೀತಿಯಲ್ಲಿ ಒತ್ತಡ ಹೇರುತ್ತಿದ್ದಾರೆ.ಮತ್ತೆರಡು ಡಿಸಿಎಂ?ಮತ್ತೆರಡು ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವ ಬಗ್ಗೆ ಹೈಕಮಾಂಡ್ ಜತೆಗೆ ಚರ್ಚೆ ನಡೆಯುವ ಸಂಭವ ಇದೆ. ಎರಡು ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಗೆ ಡಿ.ಕೆ. ಶಿವಕುಮಾರ್ ಒಲವು ತೋರಿದ್ದಾರೆ. ಲಿಂಗಾಯತ ಹಾಗೂ ಹಿಂದುಳಿದ ಸಮುದಾಯಗಳಿಗೆ ಆದ್ಯತೆ ನೀಡಿದರೆ ಮುಂಬರುವ ಚುನಾವಣೆಯಲ್ಲಿ ಅನುಕೂಲವಾಗಲಿದೆ ಎಂಬುದು ಅವರ ಲೆಕ್ಕಾಚಾರ.ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260728-51-790166608