ರಾಜ್ಯದ ವಿವಿಧೆಡೆ ಇಂದು ಧಾರಾಕಾರ ಮಳೆ: 16 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’
ಬೆಂಗಳೂರು: ರಾಜ್ಯದ ವಿವಿಧೆಡೆ ಶುಕ್ರವಾರ (ಜುಲೈ 31) ಧಾರಾಕಾರ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, 16 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ. ಉಳಿದ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಉತ್ತರ ಕನ್ನಡ, ಉಡುಪಿ, ದಕ್ಷಿ

ಬೆಂಗಳೂರು: ರಾಜ್ಯದ ವಿವಿಧೆಡೆ ಶುಕ್ರವಾರ (ಜುಲೈ 31) ಧಾರಾಕಾರ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, 16 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ. ಉಳಿದ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳ ಕೆಲವೆಡೆ ಗಂಟೆಗೆ 40ರಿಂದ 60 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಸಾಧಾರಣದಿಂದ ಮಧ್ಯಮ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದೆ.ಕರ್ನಾಟಕದ ಕರಾವಳಿ ಉದ್ದಕ್ಕೂ ಹಾಗೂ ಸಮುದ್ರ ತೀರದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ಗಾಳಿಯ ವೇಗವು ಕೆಲವೊಮ್ಮೆ 60 ಕಿ.ಮೀ.ಗೆ ತಲುಪುವ ಸಂಭವವಿದೆ. ಆದ್ದರಿಂದ ಮೀನುಗಾರರು ಎಚ್ಚರ ವಹಿಸಬೇಕು ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ಗಾಳಿ ಬೀಸುವ ಸಾಧ್ಯತೆಯಿದೆ. ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.ಶನಿವಾರವೂ ರಾಜ್ಯದ ಕೆಲವೆಡೆ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಉಳಿದ ಜಿಲ್ಲೆಗಳಿಗೆ ಇಲಾಖೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.