ವಿಜಯಪುರ: ಪೊಲೀಸ್ ಕಾನ್ಸ್ಟೆಬಲ್ ನೇಮಕಾತಿ ಪರೀಕ್ಷೆ ಗೊಂದಲ ವಿರೋಧಿಸಿ ಪ್ರತಿಭಟನೆ
ವಿಜಯಪುರ: ಜಿಲ್ಲೆಯ ತಿಕೋಟಾದಲ್ಲಿ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಗೊಂದಲವನ್ನು ಖಂಡಿಸಿ ಹಾಗೂ ಅನ್ಯಾಯಕ್ಕೆ ಒಳಗಾದ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ನಗರದ ಗಾಂಧಿ ವೃತ್ತದಲ್ಲಿ ಸೋಮವಾರ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಜಿಲ್ಲಾಡಳಿತ ಕಚೇರಿಗೆ ಮುತ್ತಿಗೆ ಹಾಕಲು ಹೊರಟ ಪ್ರತಿಭಟನಾಕಾರರನ್ನು ತಡೆದ ಪೊಲೀಸರು, ಎಬಿವಿಪ

ವಿಜಯಪುರ: ಜಿಲ್ಲೆಯ ತಿಕೋಟಾದಲ್ಲಿ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಗೊಂದಲವನ್ನು ಖಂಡಿಸಿ ಹಾಗೂ ಅನ್ಯಾಯಕ್ಕೆ ಒಳಗಾದ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ನಗರದ ಗಾಂಧಿ ವೃತ್ತದಲ್ಲಿ ಸೋಮವಾರ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಜಿಲ್ಲಾಡಳಿತ ಕಚೇರಿಗೆ ಮುತ್ತಿಗೆ ಹಾಕಲು ಹೊರಟ ಪ್ರತಿಭಟನಾಕಾರರನ್ನು ತಡೆದ ಪೊಲೀಸರು, ಎಬಿವಿಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹಣಮಂತ ಹಳ್ಳೂರು, ಪ್ರಾಂತ ಕಾರ್ಯಸಮಿತಿ ಸದಸ್ಯ ಸಂದೀಪ ಅರಳಗುಂಡಿ ಸೇರಿದಂತೆ ಪ್ರಮುಖರನ್ನು ಕಾರ್ಯಕರ್ತರನ್ನು ಬಂಧಿಸಿದರು. ಪ್ರಮುಖ ಬೇಡಿಕೆ:ಪ್ರಶ್ನೆ ಪತ್ರಿಕೆ ತಡವಾಗಿ ವಿತರಣೆಗೊಂಡ ಘಟನೆಯ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಬೇಕು, ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ನ್ಯಾಯಸಮ್ಮತ ಕ್ರಮ ಕೈಗೊಳ್ಳಬೇಕು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಜಾರಿಗೊಳಿಸಬೇಕು, ತಿಕೋಟಾದ ಶಾರದಾಂಬಾ ಪಿಯು ಕಾಲೇಜಿನಲ್ಲಿ ನಡೆದಿರುವ ಪರೀಕ್ಷೆಯನ್ನು ಮರು ಪರೀಕ್ಷೆ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.ಎಬಿವಿಪಿಯ ವಿಭಾಗ ಸಂಘಟನಾ ಕಾರ್ಯದರ್ಶಿ ಹರ್ಷಾ ನಾಯಕ ಮಾತನಾಡಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅತ್ಯಂತ ಸೂಕ್ಮವಾಗಿ, ವ್ಯವಸ್ಥಿತವಾಗಿ ಪರೀಕ್ಷೆ ನಡೆಸಿದ್ದೇವೆ ಎಂದು ಹೇಳುತ್ತಿದೆ. ಆದರೆ, ತಿಕೋಟಾ ಪರೀಕ್ಷಾ ಕೇಂದ್ರದಲ್ಲಿ ಅರ್ಧ ಗಂಟೆಗೂ ಅಧಿಕ ಕಾಲ ತಡವಾಗಿ ಪ್ರಶ್ನೆ ಪತ್ರಿಕೆ ಕೊಟ್ಟಿರುದ್ದಕ್ಕೆ ಕಾರಣ ಏನು ಎಂದು ಪ್ರಶ್ನಿಸಿದರು.ವಿಜಯಪುರ ಜಿಲ್ಲಾಧಿಕಾರಿಗಳು ಹೇಳಿದಂತೆ ಪ್ರಶ್ನೆ ಪತ್ರಿಕೆ ಗೊಂದಲವನ್ನು ಸರಿ ಪಡಿಸುವ ವೇಳೆ ತಡವಾಗಿದೆ, ಅದಕ್ಕೆ ನಾವು ಕೆಇಎ ಜೊತೆ ಮಾತನಾಡಿ ತಡವಾದ ಅಭ್ಯರ್ಥಿಗಳಿಗೆ ಸಮಯ ನೀಡುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಅಂದರೆ, ಗೊಂದಲವಾಗಿರುವುದು ಸತ್ಯದ ವಿಷಯ, ಈ ವಿಷಯವನ್ನು ಮುಚ್ಚಿ ಹಾಕಲು ಸರ್ಕಾರ ಪೊಲೀಸ್ ಇಲಾಖೆಯ ಮೂಲಕ ಎಬಿಬಿಪಿ ಕಾರ್ಯಕರ್ತರನ್ನು ಬಂಧನ ಮಾಡಿ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದರು.ಪರೀಕ್ಷೆ ಕೇಂದ್ರದಲ್ಲಿ ಪರೀಕ್ಷಾರ್ಥಿಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ನಿಗದಿತ ಸಮಯಕ್ಕೆ ವಿತರಣೆ ಮಾಡದ ಕಾರಣ ಗಂಭೀರ ಅವ್ಯವಸ್ಥೆ ಉಂಟಾಗಿದೆ. ಈ ಘಟನೆಯಿಂದ ಅನೇಕ ಅಭ್ಯರ್ಥಿಗಳು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದು, ಪರೀಕ್ಷೆಯನ್ನು ಸಮರ್ಪಕವಾಗಿ ಬರೆಯಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದರು.ರಾಜ್ಯದ ಪ್ರತಿಷ್ಠಿತ ನೇಮಕಾತಿ ಪರೀಕ್ಷೆಗಳು ಪಾರದರ್ಶಕ, ನ್ಯಾಯಸಮ್ಮತ ಹಾಗೂ ಅಭ್ಯರ್ಥಿಗಳ ಹಿತಾಸಕ್ತಿಯನ್ನು ಕಾಪಾಡುವ ರೀತಿಯಲ್ಲಿ ನಡೆಯುವುದು ಅತ್ಯಗತ್ಯವಾಗಿದೆ. ಆದರೆ, ಈ ರೀತಿಯ ಆಡಳಿತಾತ್ಮಕ ಲೋಪದಿಂದ ಅಭ್ಯರ್ಥಿಗಳ ಭವಿಷ್ಯದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುವ ಸಾಧ್ಯತೆಯಿದೆ ಎಂದು ಆರೋಪಿಸಿದರು.