ಸ್ವಾತಂತ್ರ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಸಿದ್ಧತೆ: ಎಡಿಸಿ
ಮೈಸೂರು: ಜಿಲ್ಲಾಡಳಿತದಿಂದ ಆ.15ರಂದು ಸ್ವಾತಂತ್ರ್ಯ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವರ್ಯಾ ಆರ್. ತಿಳಿಸಿದರು.ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ‘ಅಂದು ಬೆಳಿಗ್ಗೆ 9ಕ್ಕೆ ಬನ್ನಿಮಂಟಪದ ಕವಾಯತು ಮೈದಾನದಲ್ಲಿ ಧ್ವಜಾರೋಹಣ
ಮೈಸೂರು: ಜಿಲ್ಲಾಡಳಿತದಿಂದ ಆ.15ರಂದು ಸ್ವಾತಂತ್ರ್ಯ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವರ್ಯಾ ಆರ್. ತಿಳಿಸಿದರು.ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ‘ಅಂದು ಬೆಳಿಗ್ಗೆ 9ಕ್ಕೆ ಬನ್ನಿಮಂಟಪದ ಕವಾಯತು ಮೈದಾನದಲ್ಲಿ ಧ್ವಜಾರೋಹಣ ನೆರವೇರಲಿದೆ. ಶಿಷ್ಟಾಚಾರದ ಪ್ರಕಾರ ಎಲ್ಲರನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು. ಸಾರ್ವಜನಿಕರು ಪಾಲ್ಗೊಳ್ಳಬೇಕು’ ಎಂದು ಕೋರಿದರು.‘ಸ್ವಾಗತ, ವೇದಿಕೆ, ಸ್ವಚ್ಛತೆ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಿ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಯಾವುದೇ ಲೋಪ ಉಂಟಾಗದಂತೆ ನೋಡಿಕೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.‘ಜಿಲ್ಲೆಯ ಪ್ರೌಢಶಾಲೆ, ಕಾಲೇಜು, ಎನ್ಸಿಸಿ ವಿದ್ಯಾರ್ಥಿಗಳು, ಪೊಲೀಸ್ ಸೇರಿದಂತೆ ವಿವಿಧ ತಂಡಗಳು ಪಥಸಂಚಲನದಲ್ಲಿ ಭಾಗವಹಿಸಲಿವೆ. ಅವರಿಗೆ ಆ. 12 ಹಾಗೂ 13ರಂದು ಅಭ್ಯಾಸಕ್ಕೆ ವ್ಯವಸ್ಥೆ ಕಲ್ಪಿಸಬೇಕು. ಬನ್ನಿಮಂಟಪದ ಮೈದಾನದಲ್ಲಿ ಹಾಗೂ ಸಂಜೆ ಕಲಾಮಂದಿರದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪ್ರೌಢಶಾಲಾ ವಿದ್ಯಾರ್ಥಿಗಳ ಉತ್ತಮ ತಂಡ ಆಯ್ಕೆ ಮಾಡಬೇಕು’ ಎಂದು ನಿರ್ದೇಶನ ನೀಡಿದರು.‘ಜಿಲ್ಲಾ ಮಟ್ಟದ ಅಧಿಕಾರಿಗಳು ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ, ಕಡ್ಡಾಯವಾಗಿ ಬೆಳಿಗ್ಗೆ 9ಕ್ಕೆ ಬನ್ನಿಮಂಟಪದ ಸಮಾರಂಭದಲ್ಲಿ ಕಾರ್ಯಕ್ರಮಕ್ಕೆ ಸಿಬ್ಬಂದಿಯೊಂದಿಗೆ ಹಾಜರಾಗಬೇಕು. ಅಲ್ಲಿಯೇ ಹಾಜರಾತಿಗೆ ಸಹಿ ಹಾಕಬೇಕು’ ಎಂದರು.ಉಪವಿಭಾಗಾಧಿಕಾರಿ ಆಶಪ್ಪ, ಡಿಡಿಪಿಐ ಉದಯ್ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಂ.ಡಿ. ಸುದರ್ಶನ್ ಪಾಲ್ಗೊಂಡಿದ್ದರು.