ಅಂತಿಮ ವರದಿಗೆ ನಿರ್ಬಂಧ
ಬೆಂಗಳೂರು: ‘ಗೆಜೆಟೆಡ್ ಪ್ರೊಬೇಷನರಿ, ಕೈಗಾರಿಕಾ ವಿಸ್ತರಣಾಧಿಕಾರಿ ಮತ್ತು ಪಶು ವೈದ್ಯಾಧಿಕಾರಿ ಸೇರಿದಂತೆ, ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನಡೆಸಿದ ನೇಮಕಾತಿಯ ಎಲ್ಲಾ ಪ್ರಕರಣಗಳಲ್ಲಿ ಹೈಕೋರ್ಟ್ನ ಪೂರ್ವಾನುಮತಿ ಇಲ್ಲದೆ ವಿಚಾರಣಾ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಬಾರದು’ ಎಂದು ಹೈಕೋರ್ಟ್, ಸಿಐಡಿಗೆ ನಿರ್ಬಂಧ ಹೇರಿದೆ.‘ಕೆಪಿಎಸ್ಸಿ ಅಕ್ರಮ ನೇಮಕಗಳ ತನ
ಬೆಂಗಳೂರು: ‘ಗೆಜೆಟೆಡ್ ಪ್ರೊಬೇಷನರಿ, ಕೈಗಾರಿಕಾ ವಿಸ್ತರಣಾಧಿಕಾರಿ ಮತ್ತು ಪಶು ವೈದ್ಯಾಧಿಕಾರಿ ಸೇರಿದಂತೆ, ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನಡೆಸಿದ ನೇಮಕಾತಿಯ ಎಲ್ಲಾ ಪ್ರಕರಣಗಳಲ್ಲಿ ಹೈಕೋರ್ಟ್ನ ಪೂರ್ವಾನುಮತಿ ಇಲ್ಲದೆ ವಿಚಾರಣಾ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಬಾರದು’ ಎಂದು ಹೈಕೋರ್ಟ್, ಸಿಐಡಿಗೆ ನಿರ್ಬಂಧ ಹೇರಿದೆ.‘ಕೆಪಿಎಸ್ಸಿ ಅಕ್ರಮ ನೇಮಕಗಳ ತನಿಖೆಯನ್ನು ಸಿಬಿಐಗೆ ವಹಿಸಬೇಕು’ ಎಂದು ಕೋರಿ ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತು ‘ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘ’ದ ಅಧ್ಯಕ್ಷ ಆರ್.ಕಾಂತಕುಮಾರ್ ಸೇರಿದಂತೆ ಇತರರು ಸಲ್ಲಿಸಿರುವ ಅರ್ಜಿಗಳನ್ನು ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿತು.‘ಆಕ್ಷೇಪ ಸಲ್ಲಿಸಲು ಸಮಯಾವಕಾಶ ಪಡೆಯುವ ನೆಪದಲ್ಲಿ ರಾಜ್ಯ ಸರ್ಕಾರವು ವಿಚಾರಣಾ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲು ಮುಂದಾಗಿದೆ. ಈ ಮೂಲಕ ದಾಖಲೆಗಳಲ್ಲಿ ತನಿಖಾ ವರದಿಯನ್ನು ಅಡಕಗೊಳಿಸಲು ಸಿದ್ಧತೆ ನಡೆಸಿದೆ. ಆದ್ದರಿಂದ, ತನಿಖೆ ಪೂರ್ಣಗೊಂಡಿದ್ದರೂ ಪ್ರಕರಣಗಳ ಅಂತಿಮ ವರದಿಯನ್ನು ಹೈಕೋರ್ಟ್ ಅನುಮತಿಯಿಲ್ಲದೆ ಸಲ್ಲಿಸಬಾರದು ಎಂದು ಸೂಚಿಸುವಂತೆ ಅರ್ಜಿದಾರರು ಕೋರಿದ್ದಾರೆ. ಹೀಗಾಗಿ, ಹೈಕೋರ್ಟ್ ಅನುಮತಿ ಇಲ್ಲದೆ ಹಗರಣಕ್ಕೆ ಸಂಬಂಧಿಸಿದ ಯಾವುದೇ ಪ್ರಕರಣದ ಅಂತಿಮ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಬಾರದು’ ಎಂದು ನಿರ್ದೇಶಿಸಿತು.ರಾಜ್ಯ ಪ್ರಾಸಿಕ್ಯೂಷನ್ ಸಲ್ಲಿಸಿದ ಸಿಐಡಿ ತನಿಖೆಯ ವಾಸ್ತವ ಸ್ಥಿತಿಗತಿ ವರದಿಗಳನ್ನು ದಾಖಲಿಸಿಕೊಂಡ ನ್ಯಾಯಪೀಠ, ‘ಯಶಸ್ವಿ ಅಭ್ಯರ್ಥಿಗಳ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸಬಾರದು. ಈ ಆದೇಶ ಕೋರ್ಟ್ ಮೆಟ್ಟಿಲು ತುಳಿದಿರುವ ಅರ್ಜಿದಾರರಿಗೆ ಮಾತ್ರವಲ್ಲದೆ ಎಲ್ಲಾ ಅಭ್ಯರ್ಥಿಗಳಿಗೂ ಅನ್ವಯವಾಗುತ್ತದೆ’ ಎಂದು ಸ್ಪಷ್ಟಪಡಿಸಿತು. ಆಕ್ಷೇಪಣೆ ಸಲ್ಲಿಸಲು ಹತ್ತು ದಿನ ಕಾಲಾವಕಾಶ ನೀಡಿ ವಿಚಾರಣೆಯನ್ನು ಇದೇ 20ಕ್ಕೆ ಮುಂದೂಡಿತು.ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260808-51-1330310737