ಕಲಬುರಗಿ: ವಿಧಾನ ಪರಿಷತ್ ಚುನಾವಣೆಗೆ ಸಕಲ ಸಿದ್ಧತೆ
ಕಲಬುರಗಿ: ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್ ಹೇಳಿದರು.ಇಲ್ಲಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಚುನಾವಣಾ ಕಣದಲ್ಲಿರುವ ಅಭ್ಯರ್ಥಿ

ಕಲಬುರಗಿ: ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್ ಹೇಳಿದರು.ಇಲ್ಲಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳೊಂದಿಗೆ ಶುಕ್ರವಾರ ಸಮಾಲೋಚನಾ ಸಭೆ ನಡೆಸಿ ಅವರು ಮಾತನಾಡಿದರು.‘ಕ್ಷೇತ್ರದ ಎಲ್ಲ ತಾಲ್ಲೂಕುಗಳಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೊಳಿಸುವ ತಂಡಗಳು ಕಾರ್ಯನಿರ್ವಹಿಸುತ್ತಿವೆ. ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ದೂರುಗಳಿದ್ದಲ್ಲಿ ನಿಯಂತ್ರಣ ಕೊಠಡಿಯ ದೂರವಾಣಿ ಸಂಖ್ಯೆ 08472-200255ಕ್ಕೆ ಕರೆ ಮಾಡಬಹುದು’ ಎಂದರು.ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ಅಕ್ಟೋಬರ್ 23ರಂದು ಬೆಳಿಗ್ಗೆ 8ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ ಎಂದು ಹೇಳಿದರು.‘ಅಭ್ಯರ್ಥಿಗಳು ಚುನಾವಣಾ ಕರಪತ್ರಗಳನ್ನು ಮುದ್ರಿಸುವ ಮೊದಲು ನಿಗದಿತ ‘ಅನುಬಂಧ–7ಸಿ’ ನಮೂನೆಯಡಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಚುನಾವಣಾ ಪ್ರಚಾರಕ್ಕಾಗಿ ವಾಹನಗಳನ್ನು ಬಳಸಲು ಜಿಲ್ಲಾಧಿಕಾರಿ ಕಚೇರಿಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯ. ಇಡೀ ಮತಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ಸಂಚಾರಕ್ಕೆ ಸಂಬಂಧಿಸಿದ ಅನುಮತಿಯನ್ನು ಪ್ರಾದೇಶಿಕ ಆಯುಕ್ತರ ಕಚೇರಿಯಿಂದ ಪಡೆಯಬೇಕು’ ಎಂದು ಜಹೀರಾ ನಸೀಮ್ ಸೂಚಿಸಿದರು.ನಿಯಮಗಳ ಪಾಲಿಸಿ: ‘ಅಕ್ಟೋಬರ್ 23ರಂದು ಬೆಳಿಗ್ಗೆ 8ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾನ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಮತದಾನದ ದಿನ ಮದ್ಯ ಮಾರಾಟ ಹಾಗೂ ಸೇವನೆಯನ್ನು ನಿಷೇಧ ಇರಲಿದೆ. ಎಲ್ಲ ಮತಗಟ್ಟೆಗಳಲ್ಲಿ ವೆಬ್ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗುತ್ತದೆ’ ಎಂದರು.ಮತಚಲಾವಣೆಯಲ್ಲಿ ಎಚ್ಚರ ವಹಿಸಿ: ಮತದಾರರು ಚುನಾವಣಾ ಆಯೋಗ ಒದಗಿಸುವ ನೇರಳೆ ಬಣ್ಣದ ಸ್ಕೆಚ್ ಪೆನ್ನಿಂದ ಮಾತ್ರ ತಮ್ಮ ಪ್ರಾಶಸ್ತ್ಯದ ಮತವನ್ನು ಚಲಾಯಿಸಬೇಕು. ಪ್ರಾಶಸ್ತ್ಯದ ಮತಗಳನ್ನು ಕನ್ನಡ, ಇಂಗ್ಲಿಷ್ ಅಥವಾ ರೋಮನ್ ಅಂಕಿಗಳಲ್ಲಿ ನಮೂದಿಸಬಹುದು. ಈ ಚುನಾವಣೆಯಲ್ಲಿ ‘ನೋಟಾ’ ಸೌಲಭ್ಯ ಇರುವುದಿಲ್ಲ. ಪ್ರಾಶಸ್ತ್ಯದ ಕ್ರಮಸಂಖ್ಯೆಯನ್ನು ನಮೂದಿಸದೇ ಮತ ಚಲಾಯಿಸುವುದು ಅಥವಾ ನಿಗದಿತ ಕ್ರಮಕ್ಕೆ ವಿರುದ್ಧವಾಗಿ ಇತರ ಗುರುತುಗಳನ್ನು ಹಾಕುವುದರಿಂದ ಮತ ಅಮಾನ್ಯವಾಗುವ ಸಾಧ್ಯತೆಯಿದೆ. ಆದ್ದರಿಂದ ಮತದಾರರು ಸೂಚನೆಗಳನ್ನು ಸರಿಯಾಗಿ ಪಾಲಿಸಬೇಕು’ ಎಂದರು.ಅ.27ರಂದು ಮತ ಎಣಿಕೆ: ಅಕ್ಟೋಬರ್ 27ರಂದು ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದ ಭಾಸ್ಕರ್ ಹಾಲ್ನಲ್ಲಿ ಭದ್ರತಾ ಕೊಠಡಿ (ಸ್ಟ್ರಾಂಗ್ ರೂಂ) ಹಾಗೂ ಮತ ಎಣಿಕೆ ಕೇಂದ್ರ ಸ್ಥಾಪಿಸಲಾಗುತ್ತದೆ. ಅಂದು ಬೆಳಿಗ್ಗೆ 7.45ಕ್ಕೆ ಭದ್ರತಾ ಕೊಠಡಿಯ ಮುದ್ರೆ ತೆರೆಯಲಾಗುವುದು. ಮತ ಎಣಿಕೆಗಾಗಿ ಒಟ್ಟು 14 ಟೇಬಲ್ಗಳ ವ್ಯವಸ್ಥೆ ಮಾಡಲಾಗುತ್ತದೆ. ಅಭ್ಯರ್ಥಿಗಳು ತಮ್ಮ ಮತ ಎಣಿಕೆ ಏಜೆಂಟರ ವಿವರಗಳನ್ನು ಭಾವಚಿತ್ರದೊಂದಿಗೆ ನಿಗದಿತ ನಮೂನೆ–18ರಲ್ಲಿ ಸಲ್ಲಿಸಬೇಕು ಎಂದು ಜಹೀರಾ ನಸೀಮ್ ಸೂಚಿಸಿದರು.ಸಭೆಯಲ್ಲಿ ಸಹಾಯಕ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಇಕ್ರಂ ಶರೀಫ್, ಮಹಾನಗರ ಪಾಲಿಕೆಯ ಉಪ ಆಯುಕ್ತೆ (ಆಡಳಿತ) ಪ್ರಮೀಳಾ ಎಂ.ಕೆ. ಸೇರಿದಂತೆ ಚುನಾವಣಾಧಿಕಾರಿಗಳು ಹಾಗೂ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಉಪಸ್ಥಿತರಿದ್ದರು.ಅಂತಿಮ ಕಣದಲ್ಲಿ13 ಅಭ್ಯರ್ಥಿಗಳುಕಲಬುರಗಿ: ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ನಡೆಯಲಿರುವ ಚುನಾವಣಾ ಕಣದಿಂದ ನಬಿರಸೂಲ್ ಜಕಾತಿ ತಮ್ಮ ಉಮೇದುವಾರಿಕೆ ವಾಪಸ್ ಪಡೆದಿದ್ದಾರೆ. ಅಂತಿಮ ಅಖಾಡದಲ್ಲಿ ಒಟ್ಟು 13 ಅಭ್ಯರ್ಥಿಗಳು ಉಳಿದಂತಾಗಿದೆ.ಅ.23ರಂದು ನಡೆಯಲಿರುವ ಚುನಾವಣೆ ಅಂಗವಾಗಿ ಸೆ.29ರಿಂದ ಅಕ್ಟೋಬರ್ 6ರ ತನಕ ನಾಮಪತ್ರಗಳ ಸಲ್ಲಿಕೆಗೆ ಅವಕಾಶವಿತ್ತು. ಒಟ್ಟು 15 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಪರಿಶೀಲನೆ ವೇಳೆ ಒಂದು ನಾಮಪತ್ರ ತಿರಸ್ಕೃತಗೊಂಡು, 14 ಅಭ್ಯರ್ಥಿಗಳ ಉಮೇದುವಾರಿಕೆಗಳು ಕ್ರಮಬದ್ಧವಾಗಿದ್ದವು. ಅದರಲ್ಲಿ ಒಬ್ಬ ಅಭ್ಯರ್ಥಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದು, 13 ಅಭ್ಯರ್ಥಿಗಳು ಗೆಲುವಿಗಾಗಿ ಪೈಪೋಟಿ ನಡೆಸಲಿದ್ದಾರೆ.ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶರಣಪ್ಪ ಮಟ್ಟೂರ, ಬಿಜೆಪಿ ಅಭ್ಯರ್ಥಿ ಶಶೀಲ್ ಜಿ. ನಮೋಶಿ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸೈಬಣ್ಣಾ ಜಮಾದಾರ, ಜನತಾ ದಳ (ಸಂಯುಕ್ತ) ಪಕ್ಷದ ಅಭ್ಯರ್ಥಿ ಪ್ರೊ.ಎಸ್.ಎಲ್.ಪಾಟೀಲ, ಪಕ್ಷೇತರ ಅಭ್ಯರ್ಥಿಗಳಾದ ಕವಿರಾಜ, ತುಳಸಪ್ಪ ದಾಸರ, ಮೆಹಬೂಬ್ ವಂಟೇಲಿ, ರಾಜಕುಮಾರ, ರಾಜು, ಶರಣಬಸಪ್ಪ, ಶಶಿಧರ, ಶಿವಶಂಕರ ಹಾಗೂ ಸುರೇಶ ಅಂತಿಮ ಕಣದಲ್ಲಿ ಉಳಿದ ಅಭ್ಯರ್ಥಿಗಳಾಗಿದ್ದಾರೆ ಎಂದು ಚುನಾವಣಾ ಅಧಿಕಾರಿಯೂ ಆಗಿರುವ ಕಲಬುರಗಿ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್ ತಿಳಿಸಿದ್ದಾರೆ.‘34,784 ಮತದಾರರು, 144 ಮತಗಟ್ಟೆಗಳು’ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 34,784 ಮತದಾರರು ನೋಂದಣಿಯಾಗಿದ್ದಾರೆ. ಇವರಲ್ಲಿ 20,040 ಪುರುಷರು ಹಾಗೂ 14,744 ಮಹಿಳೆಯರಿದ್ದಾರೆ. ಕ್ಷೇತ್ರದಲ್ಲಿ ಬಳ್ಳಾರಿಯ ಒಂದು ಹೆಚ್ಚುವರಿ ಮತಗಟ್ಟೆ ಸೇರಿದಂತೆ ಒಟ್ಟು 144 ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಮತಗಟ್ಟೆ ಏಜೆಂಟರ ವಿವರವನ್ನು ನಿಗದಿತ ನಮೂನೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವ ಮೂಲಕ ನೇಮಕ ಮಾಡಿಕೊಳ್ಳಬಹುದು’ ಎಂದು ಜಹೀರಾ ನಸೀಮ್ ಹೇಳಿದರು.261010-34-1568772182