ಕೇಂದ್ರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಡಿ.ಕೆ. ಸುರೇಶ್ ಆರೋಪ
ದೇವನಹಳ್ಳಿ: ‘ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಕೆಲಸ ಮಾಡುತ್ತಿದೆ. ದೆಹಲಿಯಲ್ಲಿ ಜನರ ಸಂಚಾರ, ಸಂಪರ್ಕ ವ್ಯವಸ್ಥೆಗಳಿಗೆ ನಿರ್ಬಂಧ ಹೇರಿ, ಸಾವಿರಾರು ಜನರನ್ನು ಬಂಧಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ’ ಎಂದು ಬೆಂಗಳೂರು ಹಾಲು ಒಕ್ಕೂಟದ (ಬಮೂಲ್) ಅಧ್ಯಕ್ಷ ಡಿ.ಕೆ. ಸುರೇಶ್ ಪ್ರತಿಪಾದಿಸಿದರು.ಪಟ್ಟಣದ ಕೆಂಪೇಗೌಡ ವೃತ್ತದಲ್ಲಿ ಈಚೆ

ದೇವನಹಳ್ಳಿ: ‘ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಕೆಲಸ ಮಾಡುತ್ತಿದೆ. ದೆಹಲಿಯಲ್ಲಿ ಜನರ ಸಂಚಾರ, ಸಂಪರ್ಕ ವ್ಯವಸ್ಥೆಗಳಿಗೆ ನಿರ್ಬಂಧ ಹೇರಿ, ಸಾವಿರಾರು ಜನರನ್ನು ಬಂಧಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ’ ಎಂದು ಬೆಂಗಳೂರು ಹಾಲು ಒಕ್ಕೂಟದ (ಬಮೂಲ್) ಅಧ್ಯಕ್ಷ ಡಿ.ಕೆ. ಸುರೇಶ್ ಪ್ರತಿಪಾದಿಸಿದರು.ಪಟ್ಟಣದ ಕೆಂಪೇಗೌಡ ವೃತ್ತದಲ್ಲಿ ಈಚೆಗೆ ಸುದ್ದಿಗಾರರೊಂದಿಗೆ ಮಾತನಾಡಿ, ‘ದೇಶದಲ್ಲಿ ಜನರ ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ರೈಲು ಸಂಚಾರ, ಇಂಟರ್ನೆಟ್ ಹಾಗೂ ಸಂಪರ್ಕ ವ್ಯವಸ್ಥೆಗಳಿಗೆ ನಿರ್ಬಂಧ ವಿಧಿಸುವ ಮೂಲಕ ಜನರ ಧ್ವನಿ ಅಡಗಿಸುವುದು ಪ್ರಜಾಪ್ರಭುತ್ವಕ್ಕೆ ವಿರುದ್ಧ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಚುನಾವಣೆ ಎದುರಿಸಲಿ’ ಎಂದು ಸವಾಲು ಹಾಕಿದರು.‘ಮತದಾರರ ಪಟ್ಟಿಯ ಎಸ್ಐಆರ್ ಪ್ರಕ್ರಿಯೆ ಕೈಗೊಳ್ಳುವ ಮುನ್ನ ರಾಜಕೀಯ ಪಕ್ಷಗಳು, ಜನಪ್ರತಿನಿಧಿಗಳು ಹಾಗೂ ನಾಗರಿಕ ಸಮಾಜದ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಬೇಕು. ಅರ್ಹ ಮತದಾರರ ಹೆಸರು ಪಟ್ಟಿಯಿಂದ ಕೈಬಿಡದಂತೆ ಎಚ್ಚರಿಕೆ ವಹಿಸಬೇಕು. ಚುನಾವಣಾ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರ ಮತದಾನದ ಹಕ್ಕನ್ನು ರಕ್ಷಿಸುವುದು ಅತಿ ಮುಖ್ಯ’ ಎಂದು ಹೇಳಿದರು.‘ಪ್ರಜಾಪ್ರಭುತ್ವದಲ್ಲಿ ಜನರೇ ಅಂತಿಮ ತೀರ್ಪುಗಾರರು. ಅವರ ಹಕ್ಕುಗಳನ್ನು ರಕ್ಷಿಸುವ ಬದಲು ಆಡಳಿತ ವ್ಯವಸ್ಥೆ ದುರ್ಬಳಕೆ ಮಾಡಿಕೊಂಡು ಜನರನ್ನು ನಿಯಂತ್ರಿಸಲು ಮುಂದಾಗುವುದು ಸರಿಯಲ್ಲ. ಕೇಂದ್ರ ಸರ್ಕಾರದ ಇಂತಹ ಧೋರಣೆ ಖಂಡನೀಯ’ ಎಂದು ಟೀಕಿಸಿದರು.‘ಸ್ಟಿಂಗ್ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸರ್ಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಇದರ ಹಿಂದೆ ಯಾರಿದ್ದಾರೆ, ಯಾವ ಉದ್ದೇಶದಿಂದ ಕಾರ್ಯಾಚರಣೆ ನಡೆಸಲಾಗಿದೆ ಎಂಬುದನ್ನು ಸಮಗ್ರವಾಗಿ ತನಿಖೆ ಮಾಡಬೇಕು. ಈ ಕುರಿತು ಚರ್ಚೆಗಳು ನಡೆಯುತ್ತಿದ್ದು, ಶೀಘ್ರವೇ ಸತ್ಯಾಂಶ ಹೊರಬರಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.‘ಸರ್ಕಾರದ ಉತ್ತಮ ಕಾರ್ಯಕ್ರಮಗಳನ್ನು ಸಹಿಸಿಕೊಳ್ಳಲಾಗದ ಕೆಲವರು ನಿರಂತರವಾಗಿ ಆರೋಪ ಮಾಡುತ್ತಿದ್ದಾರೆ. ಕೇವಲ ಆರೋಪ ಮಾಡುವುದರಿಂದ ಸತ್ಯ ಮರೆಮಾಚಲು ಸಾಧ್ಯವಿಲ್ಲ. ತನಿಖೆ ಮೂಲಕ ವಾಸ್ತವಾಂಶವನ್ನು ಸಾರ್ವಜನಿಕರ ಮುಂದಿಡಬೇಕು’ ಎಂದು ಒತ್ತಾಯಿಸಿದರು.ಈ ವೇಳೆ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ಬೆಂಗಳೂರು ಸಹಕಾರ ಹಾಲು ಒಕ್ಕೂಟದ ನಿರ್ದೇಶಕ ಎಸ್.ಪಿ. ಮುನಿರಾಜು, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಸಿ. ಮಂಜುನಾಥ್, ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನ್ನೂರು ವೆಂಕಟೇಶ್, ಗ್ಯಾರಂಟಿ ಯೋಜನೆ ಸಮಿತಿ ಜಿಲ್ಲಾ ಉಪಾಧ್ಯಕ್ಷ ಮುದುಕುರ್ಕಿ ನಾರಾಯಣಸ್ವಾಮಿ, ಕೆಪಿಸಿಸಿ ಸದಸ್ಯ ಎ. ಚಿನ್ನಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘದ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಬಿ.ಎನ್. ಲೋಕೇಶ್, ಮುಖಂಡರಾದ ಬಿಜ್ಜವಾರ ಮಹೇಶ್, ರಘು, ರಾಮಚಂದ್ರಪ್ಪ, ಯುವ ಕಾಂಗ್ರೆಸ್ ಉಪಾಧ್ಯಕ್ಷ ಚಂದನ್ ಗೌಡ ಪಾಲ್ಗೊಂಡಿದ್ದರು.261012-15-1274818280