SIR | ಶೇ 99ರಷ್ಟು ಅರ್ಜಿ ನಮೂನೆ 7 ಸಲ್ಲಿಕೆ: ಅಲ್ಪಸಂಖ್ಯಾತರೇ ಗುರಿ ಎಂದ ಎಜಿ
ಬೆಂಗಳೂರು: ‘ಮತದಾರರ ಪಟ್ಟಿಯಿಂದ ಡಿಲೀಟ್ ಮಾಡುವುದು ಪೂರ್ವಯೋಜಿತ ಕೃತ್ಯ. ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರನ್ನೇ ಗುರಿಯಾಗಿಸಿಕೊಂಡು ಶೇ 99ರಷ್ಟು ಅರ್ಜಿ ನಮೂನೆ 7 ಸಲ್ಲಿಸಲಾಗಿದೆ’ ಎಂದು ಅಡ್ವೊಕೇಟ್ ಜನರಲ್ ಹೈಕೋರ್ಟ್ನಲ್ಲಿ ಬಲವಾದ ಆಕ್ಷೇಪ ವ್ಯಕ್ತಪಡಿಸಿದರು. ‘ಎಸ್ಐಆರ್ ವೇಳೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಅರ್ಜಿ ನಮೂನೆ–7 ಸಲ್

ಬೆಂಗಳೂರು: ‘ಮತದಾರರ ಪಟ್ಟಿಯಿಂದ ಡಿಲೀಟ್ ಮಾಡುವುದು ಪೂರ್ವಯೋಜಿತ ಕೃತ್ಯ. ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರನ್ನೇ ಗುರಿಯಾಗಿಸಿಕೊಂಡು ಶೇ 99ರಷ್ಟು ಅರ್ಜಿ ನಮೂನೆ 7 ಸಲ್ಲಿಸಲಾಗಿದೆ’ ಎಂದು ಅಡ್ವೊಕೇಟ್ ಜನರಲ್ ಹೈಕೋರ್ಟ್ನಲ್ಲಿ ಬಲವಾದ ಆಕ್ಷೇಪ ವ್ಯಕ್ತಪಡಿಸಿದರು. ‘ಎಸ್ಐಆರ್ ವೇಳೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಅರ್ಜಿ ನಮೂನೆ–7 ಸಲ್ಲಿಸಿದ ಹಿನ್ನೆಲೆಯಲ್ಲಿ ನಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಪಡಿಸಬೇಕು’ ಎಂದು ಕೋರಿ ಗುಟ್ಟಹಳ್ಳಿಯ ಜಿ.ಎಸ್.ವಸಂತಲಕ್ಷ್ಮಿ ಮತ್ತು ಆರ್.ದೀಪಕ್ ಸಿಂಗ್ ಸಲ್ಲಿಸಿದ್ದ ರಿಟ್ ಅರ್ಜಿಗಳನ್ನು ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹಾಜರಾಗಿದ್ದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ, ‘ಎಸ್ಐಆರ್ ಪ್ರಕ್ರಿಯೆ ಸಂದರ್ಭದಲ್ಲಿ ಬಿಎಲ್ಎ ಮತ್ತು ಬಿಎಲ್ಒಗಳು ಮನೆಮನೆಗೆ ತೆರಳಿದ ಸಂದರ್ಭದಲ್ಲಿ ಮತದಾರರು ಅಲ್ಲಿ ವಾಸಿಸುತ್ತಿದ್ದರು. ಇದನ್ನು ತಿಳಿದೂ ತಿಳಿದು ಅವರನ್ನು ಮತದಾರರ ಪಟ್ಟಿಯಿಂದ ಅಳಿಸಿ ಹಾಕುವ ಉದ್ದೇಶದೊಂದಿಗೆ ಅರ್ಜಿ ನಮೂನೆ 7 ಅನ್ನು ಸಲ್ಲಿಸಲಾಗಿದೆ’ ಎಂದು ಆರೋಪಿಸಿದರು.‘ಎಲೆಕ್ಟ್ರಾನಿಕ್ ದಾಖಲೆಗಳ ನಾಶವನ್ನು ತಡೆಯುವ ದೃಷ್ಟಿಯಿಂದಲೂ ತನಿಖೆ ನಡೆಸಬೇಕಿದೆ. ಚುನಾವಣಾ ಆಯೋಗ ಹಾಗೂ ಪೊಲೀಸರ ವಿಚಾರಣೆಯ ವರದಿಗಳನ್ನು ನ್ಯಾಯಾಲಯದ ಮುಂದಿಡಲಾಗುವುದು. ಅವುಗಳನ್ನು ಪರಿಶೀಲಿಸಿ ನ್ಯಾಯಾಲಯವೇ ಸೂಕ್ತ ತೀರ್ಮಾನ ಕೈಗೊಳ್ಳಬಹುದು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.‘ರಾಜಕೀಯ ಪಕ್ಷವು ಚುನಾವಣಾ ಆಯೋಗದ ಜೊತೆ ಸೇರಿಕೊಂಡು ಈ ಕೃತ್ಯ ನಡೆಸುತ್ತಿದೆ. ಇದರ ಹಿಂದಿನ ಉದ್ದೇಶ ಏನು ಎಂಬುದನ್ನು ಪತ್ತೆ ಹಚ್ಚಬೇಕಿದೆ. ತನಿಖೆಗೆ ಅನುಮತಿ ನೀಡಿದರೆ ಅರ್ಜಿದಾರರನ್ನು ಬಂಧಿಸುವುದಿಲ್ಲ ಹಾಗೂ ಹೈಕೋರ್ಟ್ ಅನುಮತಿಯಿಲ್ಲದೆ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸುವುದಿಲ್ಲ. ಆದ್ದರಿಂದ, ತನಿಖೆ ಮುಂದುವರೆಸಲು ಅನುಮತಿ ನೀಡಬೇಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.ಇದಕ್ಕೆ ಅರ್ಜಿದಾರರ ಪರ ಪದಾಂಕಿತ ವಕೀಲ ಎಂ.ಅರುಣ್ ಶ್ಯಾಮ್, ‘ತಪ್ಪು ಮಾಹಿತಿ ನೀಡಿರುವುದು ಕಂಡುಬಂದರೆ ಚುನಾವಣಾ ಅಧಿಕಾರಿಗಳೇ ಕ್ರಮ ಕೈಗೊಳ್ಳಬಹುದಾಗಿದೆ. ಮತದಾರರ ಪಟ್ಟಿಯಿಂದ ಹೆಸರು ಅಳಿಸಿ ಹೋದವರಿಗೆ ಮೇಲ್ಮನವಿ ಸಲ್ಲಿಸುವ ಹಕ್ಕಿದೆ. ಎರಡು ಹಂತಗಳಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶ ಇರುವುದರಿಂದ, ಈ ಹಂತದಲ್ಲೇ ಪೊಲೀಸ್ ದೂರು ದಾಖಲಿಸುವ ಅಗತ್ಯವಿಲ್ಲ’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.ವಾದ–ಪ್ರತಿವಾದ ಆಲಿಸಿದ ನ್ಯಾಯಪೀಠ, ಅರ್ಜಿದಾರರ ವಿರುದ್ಧದ ತನಿಖೆಗೆ ಈ ಮೊದಲು ನೀಡಿದ್ದ ಮಧ್ಯಂತರ ತಡೆ ಆದೇಶವನ್ನು ವಿಸ್ತರಿಸಿತು. ‘ಅರ್ಜಿದಾರರು ನೀಡಿರುವ ಅರ್ಜಿ ನಮೂನೆ 7ಕ್ಕೆ ಸಂಬಂಧಿಸಿದ ವಿದ್ಯುನ್ಮಾನ ದಾಖಲೆಗಳನ್ನು ಕಾಪಿಡಬೇಕು. ಅಗತ್ಯ ಕಂಡು ಬಂದರೆ ದಾಖಲೆಗಳನ್ನು ತನಿಖಾಧಿಕಾರಿಗಳಿಗೆ ವರ್ಗಾಯಿಸಬೇಕು’ ಎಂದು ಚುನಾವಣಾ ನೋಂದಣಿ ಅಧಿಕಾರಿಗಳಿಗೆ ನಿರ್ದೇಶಿಸಿ ಆದೇಶ ಕಾಯ್ದಿರಿಸಿತು.