ಬೆಂಗಳೂರಿನಲ್ಲಿ ವರುಣನ ಅಬ್ಬರ – 7 ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ
ಬೆಂಗಳೂರು: ಈಶಾನ್ಯ ಮಾನ್ಸೂನ್ ಮಾರುತಗಳ ಪ್ರಭಾವದಿಂದಾಗಿ ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ರಾಜಧಾನಿ ಬೆಂಗಳೂರು(Bengaluru) ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಆರಂಭವಾಗಿದೆ. ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದಂತೆ ಸಂಜೆಯಾಗುತ್ತಿದ್ದಂತೆಯೇ ನಗರದ ಪ್ರಮುಖ ಬಡಾವಣೆಗಳಲ್ಲಿ ಧಾರಾಕಾರ ಮಳೆ(Heavy Rain) ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊ

ಬೆಂಗಳೂರು: ಈಶಾನ್ಯ ಮಾನ್ಸೂನ್ ಮಾರುತಗಳ ಪ್ರಭಾವದಿಂದಾಗಿ ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ರಾಜಧಾನಿ ಬೆಂಗಳೂರು(Bengaluru) ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಆರಂಭವಾಗಿದೆ. ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದಂತೆ ಸಂಜೆಯಾಗುತ್ತಿದ್ದಂತೆಯೇ ನಗರದ ಪ್ರಮುಖ ಬಡಾವಣೆಗಳಲ್ಲಿ ಧಾರಾಕಾರ ಮಳೆ(Heavy Rain) ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಮುಂದಿನ ಐದು ದಿನಗಳ ಕಾಲ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಸಂಜೆಯಾಗುತ್ತಿದ್ದಂತೆ ಬೆಂಗಳೂರು ನಗರದ ಹಲವೆಡೆ ಮಳೆ ಬಿರುಸುಗೊಂಡಿದೆ. ಮೆಜೆಸ್ಟಿಕ್, ಕಾರ್ಪೊರೇಷನ್, ಯಶವಂತಪುರ, ಮೈಸೂರು ಬ್ಯಾಂಕ್ ಸರ್ಕಲ್, ಮಲ್ಲೇಶ್ವರಂ, ರಾಜಾಜಿನಗರ ಸೇರಿದಂತೆ ಸುತ್ತಮುತ್ತಲಿನ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಮೆಜೆಸ್ಟಿಕ್ ಬಸ್ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣದ ಸುತ್ತಮುತ್ತ ರಸ್ತೆಗಳಲ್ಲಿ ನೀರು ನಿಂತಿದ್ದು, ಊರಿಗೆ ತೆರಳಲು ಬಂದಿದ್ದ ಪ್ರಯಾಣಿಕರು ಹಾಗೂ ಕೆಲಸ ಮುಗಿಸಿ ಮನೆಗೆ ಹೊರಟಿದ್ದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರು ಹೊರವಲಯದ ಚಂದಾಪುರ ಸಮೀಪದ ಕಿತ್ತಾಗನಹಳ್ಳಿ ಕ್ರಾಸ್ ಬಳಿ ಸುರಿದ ಧಾರಾಕಾರ ಮಳೆಗೆ ಹೆದ್ದಾರಿ ರಸ್ತೆ ಸಂಪೂರ್ಣ ಜಲಾವೃತವಾಗಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದೊಂದು ಗಂಟೆಯಿಂದ ಸುರಿದ ಬಿರುಸಿನ ಮಳೆಗೆ ಚಂದಾಪುರ-ಹೊಸೂರು ಸಂಪರ್ಕ ರಸ್ತೆಯ ಕಿತ್ತಾಗನಹಳ್ಳಿ ಕ್ರಾಸ್ ಬಳಿ ಅಪಾರ ಪ್ರಮಾಣದ ನೀರು ನಿಂತು ಹೆದ್ದಾರಿಯು ಕೆರೆಯಂತಾಗಿದೆ ರಾಜ್ಯದ ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 2 ಗಂಟೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಮಳೆಯ ಜೊತೆಗೆ ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಗಾಳಿಯ ತೀವ್ರತೆಗೆ ಮರದ ಕೊಂಬೆಗಳು ಮುರಿದು ಬೀಳುವ ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ.ಯಾವುದೇ ಕಾರಣಕ್ಕೂ ಸಾರ್ವಜನಿಕರು ಹಾಗೂ ವಾಹನ ಸವಾರರು ಮರಗಳ ಕೆಳಗೆ ನಿಲ್ಲಬಾರದು ಎಂದು ಹವಾಮಾನ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ನೀಡಿದೆ.