ವರದಕ್ಷಿಣೆ ಕಿರುಕುಳದಿಂದ ಮಹಿಳೆ ಆತ್ಮಹತ್ಯೆ – ಪತಿ, ಅತ್ತೆಗೆ 10 ವರ್ಷ ಜೈಲು
ಶಿವಮೊಗ್ಗ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿವಾಹಿತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪತಿ ಮತ್ತು ಅತ್ತೆಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ಶಿವಮೊಗ್ಗದ ನ್ಯಾಯಾಲಯ ತೀರ್ಪು ನೀಡಿದೆ. ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದ ನಿವಾಸಿ ಜ್ಯೋತಿ (24) 2021 ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್

ಶಿವಮೊಗ್ಗ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿವಾಹಿತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪತಿ ಮತ್ತು ಅತ್ತೆಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ಶಿವಮೊಗ್ಗದ ನ್ಯಾಯಾಲಯ ತೀರ್ಪು ನೀಡಿದೆ. ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದ ನಿವಾಸಿ ಜ್ಯೋತಿ (24) 2021 ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಪತಿ ದಯಾನಂದ್ (37) ಮತ್ತು ಆತನ ತಾಯಿ ಸುಮಿತ್ರಾ (65) ಅವರು ಸೊಸೆ ಜ್ಯೋತಿ ಅವರಿಗೆ ಹೆಚ್ಚುವರಿ ವರದಕ್ಷಿಣೆ ತರುವಂತೆ ಮಾನಸಿಕ ಹಾಗೂ ದೈಹಿಕವಾಗಿ ಕಿರುಕುಳ ನೀಡುತ್ತಿದ್ದರು. ಇದರಿಂದ ಮನನೊಂದ ಜ್ಯೋತಿ ಆತ್ಮಹತ್ಯೆಗೆ ಶರಣಾಗಿದ್ದರು. ಈ ಸಂಬಂಧ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದ ಆಗಿನ ಡಿವೈಎಸ್ಪಿ ಶಾಂತವೀರ್ ಇ. ಅವರು ತನಿಖೆ ಪೂರ್ಣಗೊಳಿಸಿ, ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದರು. ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಸರ್ಕಾರಿ ಅಭಿಯೋಜಕರಾದ ಮಮತಾ.ಬಿ.ಎಸ್. ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು. ವಿಚಾರಣೆ ನಡೆಸಿ, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಯಶವಂತ ಕುಮಾರ್ ಅವರು ತೀರ್ಪು ನೀಡಿದ್ದಾರೆ. ಅಪರಾಧಿಗಳಾದ ಪತಿ ದಯಾನಂದ್ ಮತ್ತು ಅತ್ತೆ ಸುಮಿತ್ರಾಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 2.24 ಲಕ್ಷ ರೂ. ದಂಡ ಹಾಗೂ ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.