‘ಶಾಂತಿಯುತ ಪ್ರತಿಭಟನೆ ಮೂಲಭೂತ ಹಕ್ಕು’
ಮುಂಬೈ: ‘ಶಾಂತಿಯುತ ಪ್ರತಿಭಟನೆಯು ಪ್ರತಿಯೊಬ್ಬ ಪ್ರಜೆಯ ಮೂಲಭೂತ ಹಕ್ಕು. ಆದರೆ, ಪ್ರತಿಭಟನಕಾರರ ಹಿನ್ನೆಲೆ ಮತ್ತು ಸಾರ್ವಜನಿಕರಿಗೆ ಉಂಟಾಗುವ ತೊಂದರೆಯಂತಹ ಅಂಶಗಳನ್ನು ಸಹ ಪರಿಶೀಲಿಸುವುದು ಅತ್ಯಗತ್ಯ’ ಎಂದು ಬಾಂಬೆ ಹೈಕೋರ್ಟ್ ಸೋಮವಾರ ಅಭಿಪ್ರಾಯಪಟ್ಟಿದೆ. ನಗರದಲ್ಲಿ ಇತ್ತೀಚೆಗೆ ನಡೆದ ಮುಖ್ಯ ಚುನಾವಣಾ ಆಯುಕ್ತರ (ಸಿಇಸಿ) ವಿರುದ್ಧದ ಪ್ರತಿಭಟನೆಗಳ ವೇಳೆ ಪೊಲೀಸ

ಮುಂಬೈ: ‘ಶಾಂತಿಯುತ ಪ್ರತಿಭಟನೆಯು ಪ್ರತಿಯೊಬ್ಬ ಪ್ರಜೆಯ ಮೂಲಭೂತ ಹಕ್ಕು. ಆದರೆ, ಪ್ರತಿಭಟನಕಾರರ ಹಿನ್ನೆಲೆ ಮತ್ತು ಸಾರ್ವಜನಿಕರಿಗೆ ಉಂಟಾಗುವ ತೊಂದರೆಯಂತಹ ಅಂಶಗಳನ್ನು ಸಹ ಪರಿಶೀಲಿಸುವುದು ಅತ್ಯಗತ್ಯ’ ಎಂದು ಬಾಂಬೆ ಹೈಕೋರ್ಟ್ ಸೋಮವಾರ ಅಭಿಪ್ರಾಯಪಟ್ಟಿದೆ. ನಗರದಲ್ಲಿ ಇತ್ತೀಚೆಗೆ ನಡೆದ ಮುಖ್ಯ ಚುನಾವಣಾ ಆಯುಕ್ತರ (ಸಿಇಸಿ) ವಿರುದ್ಧದ ಪ್ರತಿಭಟನೆಗಳ ವೇಳೆ ಪೊಲೀಸರು ಪ್ರತಿಭಟನಕಾರರನ್ನು ಕಾನೂನುಬಾಹಿರವಾಗಿ ವಶಕ್ಕೆ ಪಡೆದಿದ್ದಾರೆ ಎಂದು ಆರೋಪಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳಿಗೆ ಪ್ರತಿಕ್ರಿಯಿಸುವಂತೆ ಮುಖ್ಯ ನ್ಯಾಯಮೂರ್ತಿ ಮಹೇಶ್ ಚಂದ್ರ ತ್ರಿಪಾಠಿ ಮತ್ತು ನ್ಯಾಯಮೂರ್ತಿ ಅದ್ವೈತ್ ಸೇತ್ನಾ ಅವರಿದ್ದ ಪೀಠವು ಮಹಾರಾಷ್ಟ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಬೆಂಬಲ ಸೂಚಿಸಿ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದವರ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಮತ್ತು ಅಕ್ರಮ ಬಂಧನದ ವಿರುದ್ಧ ವಕೀಲ ಸಾವರ್ ದೇವ್ರೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಪೀಠವು ನಡೆಸಿತು.‘ಪ್ರತಿಯೊಬ್ಬರಿಗೂ ಪ್ರತಿಭಟಿಸುವ ಹಕ್ಕಿದೆ. ಆದರೆ, ಆ ಪ್ರತಿಭಟನೆಯು ಶಾಂತಿಯುತವಾಗಿರಬೇಕು. ಪ್ರತಿಭಟನೆಯಲ್ಲಿ ಭಾಗವಹಿಸುವ ವ್ಯಕ್ತಿಯ ಅರ್ಹತೆ, ಹಿನ್ನೆಲೆಯನ್ನು ಸಹ ಪರಿಶೀಲಿಸುವ ಅಗತ್ಯವಿದೆ. ಅವರಿಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇರಬಾರದು. ಮುಗ್ಧ ನಾಗರಿಕರ ಸೋಗಿನಲ್ಲಿ ಅಪರಾಧಿಗಳು ಭಾಗವಹಿಸಬಾರದು’ ಎಂದು ತಿಳಿಸಿದೆ.ಮುಂದಿನ ವಿಚಾರಣೆಯನ್ನು ನವೆಂಬರ್ 19ಕ್ಕೆ ಮುಂದೂಡಲಾಗಿದೆ.